ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

Category: ಶ್ರೀಕೃಷ್ಣ

Author: ಕನಕದಾಸ

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ||ಪ||
ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆ ||ಅ||

ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ ||1||

ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ ||2||

ಕುಸುಮದಲಿ ಗಂಧವೋ ಗಂಧದಲಿ ಕುಸುಮವೋ
ಕುಸುಮ ಗಂಧಗಳೆರಡು ಆಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ ||3||